ತುಮಕೂರು : ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ತುಮಕೂರು ಆರೋಗ್ಯ ಅಭಿಯಾನದ ಅಂಗವಾಗಿ ಪ್ರಸಕ್ತ ವರ್ಷದಲ್ಲಿ 10,000 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳುವ ಸಂಕಲ್ಪ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಹಮ್ಮಿಕೊಂಡಿದ್ದ ವಿಶೇಷ ಬೃಹತ್ ಕಣ್ಣಿನ ಪೊರೆ ಶಸ್ತ್ರಚಿಕಿತ್ಸ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಶಿಬಿರದಲ್ಲಿ ಕಣ್ಣಿನ ಪೊರೆ ಸಮಸ್ಯೆ ಇರುವವರನ್ನು ಪತ್ತೆ ಹಚ್ಚುವುದರೊಂದಿಗೆ ಅಸಾಂಕ್ರಾಮಿಕ ರೋಗಿಗಳಿಗೆ ಔಷಧಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಸರ್ಕಾರ ಜಾರಿಗೆ ತರುವ ಅರೋಗ್ಯ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ಮೂಲಕ ಸಾರ್ವಜನಿಕರಲ್ಲಿ ಅರೋಗ್ಯ ಜಾಗೃತಿ ಮೂಡಿಸುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ. ಜಿಲ್ಲೆಯ 330 ಗ್ರಾಮ ಪಂಚಾಯಿತಿ, 27 ಲಕ್ಷ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸಮೀಕ್ಷೆ ಮಾಡಿ ಹಿರಿಯ ನಾಗರಿಕರಿಗೆ ಸೂಕ್ತ ಚಿಕಿತ್ಸೆ ಪಡೆಯಲು ಸೇತುವೆಯಾಗಿರುವ ಆಶಾ ಕಾರ್ಯಕರ್ತೆಯರು ಹಾಗೂ ಪಿ.ಹೆಚ್.ಸಿ ಡಾಕ್ಟರ್ ಗಳು ಅಭಿಯಾನದ ಕೇಂದ್ರ ಬಿಂದುಗಳಾಗಿವೆ ಎಂದು ಅಭಿನಂದನೀಯ ಮಾತುಗಳನ್ನಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ತುಮಕೂರು ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ 30 ವರ್ಷ ಮೇಲ್ಪಟ್ಟ 17 ಲಕ್ಷ ಮಂದಿಯ ಆರೋಗ್ಯ ತಪಾಸಣೆ ಮಾಡುವ ಗುರಿಯನ್ನು ಹೊಂದಲಾಗಿದ್ದು, ಈಗಾಗಲೇ 5.22 ಲಕ್ಷ ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ 2 ಲಕ್ಷ ಮಕ್ಕಳಿಗೆ ಸಮಗ್ರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ದೃಷ್ಟಿ ದೋಷವುಳ್ಳ 5,000 ಮಕ್ಕಳಿಗೆ ಕನ್ನಡಕ ವಿತರಣೆ ಮಾಡಲಾಗುವುದು ಎಂದರಲ್ಲದೆ, 3 ಕೋಟಿ ರೂ. ವೆಚ್ಚದಲ್ಲಿ ಮಾತು ಬಾರದ ಹಾಗೂ ಕಿವಿ ಕೇಳಿಸದ 31 ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಡಿ.ಎನ್. ಮಂಜುನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|| ಅಸ್ಗರ್ ಬೇಗ್, ಮಲೇರಿಯಾ ಅಧಿಕಾರಿ ಡಾ|| ಚಂದ್ರಶೇಖರ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು, ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ಹಿರಿಯ ನಾಗರಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.