ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ-ಎಚ್.ಡಿ.ರೇವಣ್ಣ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿಯ ವಿಶೇಷ ತನಿಖಾ ದಳ(ಎಸ್ಐಟಿ) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯ ಎಸ್ಐಟಿ ಅಧಿಕಾರಿಗಳು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ವಿರುದ್ಧ 42ನೇ ವಿಶೇಷಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ನ್ಯಾಯಾಲಯ ಇನ್ನೂ ಚಾರ್ಜ್‌ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಎಸಗಿರುವ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳಿಗೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ ತನಿಖಾಧಿಕಾರಿ ಸುಮಾರಾಣಿ ಅವರ ತಂಡ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಪ್ರಜ್ವಲ್ ರೇವಣ್ಣ ಕೇಸ್; ದೋಷಾರೋಪ ಪಟ್ಟಿಯಲ್ಲೇನಿದೆ?
ಇನ್ನು ಈ ದೋಷಾರೋಪ ಪಟ್ಟಿಯಲ್ಲಿ ಏನೇನು ಅಂಶಗಳಿವೆ ಎಂಬ ಮಾಹಿತಿ ಕುತೂಹಲ ಮೂಡಿಸಿದೆ. ಬಲ್ಲ ಮೂಲಗಳ ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್ ಮತ್ತು ಅಡುಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರಜ್ವಲ್ ರೇವಣ್ಣ ಕೆಲಸದಾಕೆಯನ್ನು ಹಿಂದಿನಿಂದ ತಬ್ಬಿ, ಸೊಂಟ ಹಿಡಿದು ಕರೆದಿದ್ದಾರೆ ಎಂಬ ಉಲ್ಲೇಖ ಇರುವುದಾಗಿ ತಿಳಿದುಬಂದಿದೆ.
ಹೊಳೆನರಸೀಪುರದ ಮನೆಯಲ್ಲಿ ನಿರಂತರವಾಗಿ ಮತ್ತು ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿದ್ದಾರೆ. ಸಂತ್ರಸ್ತೆಯನ್ನು ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ ಎಂದೂ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಹೊಳೆನರಸೀಪುರದಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಅತ್ಯಾಚಾರ ಎಸಗಿದ್ದಾರೆ ಎಂದೂ ಹೇಳಲಾಗಿದೆ.
ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಸಂತ್ರಸ್ತೆಯ ಮಗಳಿಗೆ ವಿಡಿಯೋ ಕರೆ ಮಾಡಿ ವಿವಸ್ತ್ರಳಾಗುವಂತೆ ಒತ್ತಾಯಿಸಿ ಅದರ ಸ್ಕ್ರೀನ್ ಶಾಟ್‌ಗಳನ್ನು ಇಟ್ಟುಕೊಂಡಿದ್ದಾರೆ. ಪ್ರಕರಣ ದಾಖಲಾದ ನಂತರ ಪ್ರಜ್ವಲ್ ವಿಡಿಯೋಗಳನ್ನು ನಾಶಪಡಿಸಿದ್ದಾರೆ ಎಂದೂ ಚಾರ್ಜ್‌ಶೀಟ್‌ನಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.
ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದ್ದು ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದಾರೆ.
ಪ್ರಕರಣದ ವಿಸ್ತೃತ ತನಿಖೆಗೆ ದಿ.28.04.2024 ರಂತೆ ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಗೆ ಆದೇಶ ಮಾಡಲಾಗಿತ್ತು. ತನಿಖೆಯ ಸಂದರ್ಭದಲ್ಲಿ ಸುಮಾರು 150 ಕ್ಕೂ ಹೆಚ್ಚು ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಸಂತ್ರಸ್ಥೆಯರು ಹಾಗೂ ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿ,ಹಲವು ಸ್ಥಳಗಳಲ್ಲಿ ಮಹಜರು ಜರುಗಿಸಿ ಜೈವಿಕ, ಭೌತಿಕ, ವೈಜ್ಞಾನಿಕ, ಮೊಬೈಲ್, ಡಿಜಿಟಲ್ ಹಾಗೂ ಇತರೆ ಸಾಂದರ್ಭಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿತ್ತು. ಈ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ಪರೀಕ್ಷೆಗೆ ಒಳಪಡಿಸಿ, ಪ್ರಯೋಗಾಲಯ ತಜ್ಞರ ಪರೀಕ್ಷಾ ವರದಿಗಳನ್ನು ಸ್ವೀಕರಿಸಿ, ತಜ್ಞರ ಅಭಿಪ್ರಾಯಗಳನ್ನು ಪಡೆದು ಆರೋಪಿಗಳಾದ ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.