ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು

Share It

ಮಂಗಳೂರು: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವೊಂದರಲ್ಲಿ 26 ವರ್ಷದ ಯುವಕನಿಗೆ 20 ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸುವ ಮೂಲಕ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ಮಾದರಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಅರೋಪಿ ಯುವಕ 2020ರಲ್ಲಿ ಬಾಲಕಿಯನ್ನು ಪುಸಲಾಯಿಸಿ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಪರಿಣಾಮ ಅಪ್ರಾಪ್ತೆ ಗರ್ಭಿಣಿಯಾಗಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾ‌ರ್ ಬಿ. ತನಿಖೆ ನಡೆಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯ ಪರಿಗಣಿಸಿ ಹಾಗೂ ವಾದ – ಪ್ರತಿವಾದ ಆಲಿಸಿದ ನಂತರ ಆರೋಪಿಯ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ.

ನ್ಯಾಯಾಧೀಶರಾದ ಮಾನು ಕೆ.ಎಸ್‌. ಅವರು ಆರೋಪಿಗೆ ಭಾರತೀಯ ದಂಡ ಸಂಹಿತೆ ಕಲಂ 376(2)(ಎನ್) ಮತ್ತು ಕಲಂ 6 ಪೋಕ್ಸೋ ಕಾಯ್ದೆಯಂತೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ.

ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ಆಕೆಯ ಮಗುವಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಬದರಿನಾಥ ನಾಯರಿ ವಾದ ಮಂಡಿಸಿದ್ದರು.


Share It

You May Have Missed

You cannot copy content of this page