ರಾಜಕೀಯ ಸುದ್ದಿ

ಎಸ್‌ಸಿ, ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರ ನೇಮಿಸದ ಸರಕಾರ: ಹೈಕೋರ್ಟ್ ನೊಟೀಸ್

Share It

ಬೆಂಗಳೂರು: ಎಸ್‌ಸಿ, ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದಿರುವ ಸಂಬಂಧ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ನೇತೃತ್ವದ ವಿಭಾಗೀಯ ಪೀಠ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಕಳೆದ ಎರಡೂವರೆ ವರ್ಷಗಳಿಂದ ಅಧ್ಯಕ್ಷರ ನೇಮಕ ಮಾಡದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅನ್ವಯ ನೊಟೀಸ್ ಜಾರಿಮಾಡಿತು.

ಅಲ್ಲದೆ, ರಾಜ್ಯ ಸರ್ಕಾರ, ಪರಿಶಿಷ್ಟಜಾತಿ ಮತ್ತು ಪಂಗಡಗಳ ಆಯೋಗ, ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿತು. ಜೊತೆಗೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಕಳೆದ ಎರಡು ವರ್ಷಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧ್ಯಕ್ಷರ ಹುದ್ದೆ ಖಾಲಿಯಿದೆ. ಇದರಿಂದಾಗಿ ಆಯೋಗಕ್ಕೆ ಬರುವ ದೂರುಗಳ ವಿಚಾರಣೆ ನಡೆಸುವುದಕ್ಕೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ತಿಳಿಸಿದರು.

‘ಅಲ್ಲದೆ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 2002 ರ ಕಾಯ್ದೆ ಅಡಿ ಆಯೋಗ ರಚಿಸಲಾಗಿದ್ದು, ಅದಕ್ಕೆ ಎರಡೂವರೆ ವರ್ಷಗಳಿಂದ ಅಧ್ಯಕ್ಷರ ನೇಮಕವಾಗಿಲ್ಲ. ಇಲ್ಲಿ ಲಕ್ಷಕ್ಕೂ ಅಧಿಕ ಪ್ರಕರಣಗಳು ಬಾಕಿ ಇದ್ದು, ತುಳಿತಕ್ಕೆ ಒಳಗಾದ ಸಮುದಾಯಗಳ ಜನರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ, ತುರ್ತಾಗಿ ಅಧ್ಯಕ್ಷರ ನೇಮಕ ಮಾಡಬೇಕು’ ಎಂದು ಕೋರಿದರು.

‘ಜೊತೆಗೆ, ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದ ಪರಿಣಾಮ ಪರೋಕ್ಷವಾಗಿ ಪರಿಶಿಷ್ಟ ಜಾತಿಗಳ ಮೇಲೆ ದೌರ್ಜನ್ಯಗಳು ಹೆಚ್ಚಾಗಲು ಕಾರಣವಾಗಿದೆ. ಸರ್ಕಾರವು ಅಧ್ಯಕ್ಷರ ನೇಮಕ ಮಾಡದಿರುವುದು ಸಂವಿಧಾನದ ಪರಿಚ್ಛೇದ 14 ರ ಅಡಿಯಲ್ಲಿ ನೀಡಿರುವ ಸಮಾನತೆಗೆ ಧಕ್ಕೆಯಾಗಲಿದೆ. ಸಂವಿಧಾನದ ಪರಿಚ್ಛೇದ 46 ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಗಳಿಗೆ ಶೈಕ್ಷಣಿಕ ಮತ್ತು ಆರ್ಥಿಕ ಹಿತಾಸಕ್ತಿ ಕಾಪಾಡುವುದು ಸಾಮಾಜಿಕ ಅನ್ಯಾಯ ಮತ್ತು ಶೋಷಣೆಯಿಂದ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ” ಎಂದರು.

ವಾದ ಆಲಿಸಿದ ನ್ಯಾಯಪೀಠ, ಸರ್ಕಾರ ಸೇರಿ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಫೆಬ್ರವರಿ 17 ಕ್ಕೆ ಮುಂದೂಡಿತು.


Share It

You cannot copy content of this page