ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಹೆಚ್.ಡಿ. ದೇವೇಗೌಡ
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು.
ಪಕ್ಷದ ರಾಜ್ಯ ಕಚೇರಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಗೆ ಮುಂದುವರಿಯುತ್ತದೆ. ಆದರೆ, ಪಕ್ಷ ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯ. ಸ್ಥಳೀಯ ಚುನಾವಣೆ ಸೀಟು ಹಂಚಿಕೆ ಬಗ್ಗೆ ನರೇಂದ್ರ ಮೋದಿ ಅವರು, ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಆಗುತ್ತದೆಯೇ? ಎಂದು ಹೇಳಿದರು.
ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಂಬಂಧ ಚೆನ್ನಾಗಿದೆ. ನರೇಂದ್ರ ಮೋದಿ ಅವರು ಹಾಗೂ ಅಮಿತ್ ಶಾ ಅವರೊಂದಿಗೆ ನಮ್ಮ ಬಾಂಧವ್ಯ ಉತ್ತಮವಾಗಿದೆ. ನಮ್ಮ ಶಕ್ತಿ ಎಲ್ಲೆಲ್ಲಿ ಇದೆಯೋ ಅಲೆಲ್ಲಾ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ನಗರ ಪಾಲಿಕೆಗಳಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ. ಈ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷರು ನೀಡಿರುವ ಹೇಳಿಕೆ ತಪ್ಪು ಎಂದು ನಾನು ಹೇಳಲಾರೆ ಎಂದರು ದೇವೇಗೌಡರು.
ಪಕ್ಷದ ಸಂಘಟನೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಜತೆ ಮಾತನಾಡಿದ್ದೇನೆ. ಹಾಸನದಲ್ಲಿ ಜ. 23ರಂದು, ಬೆಂಗಳೂರಿನಲ್ಲಿ ಜ. 18ರಂದು ಸಭೆ ಮಾಡುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿಯೇ ಇರುತ್ತೇವೆ. ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಜೆಡಿಎಸ್‌ಗೆ ಮತ್ತು 3 ಬಿಜೆಪಿಗೆ ಹಂಚಿಕೆಯಾಗುವ ಬಗ್ಗೆ ಚರ್ಚೆ ಆಗಿದೆ ಎಂದರು.
ಬೆಂಗಳೂರು ನಗರದಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಕೆಲಸ ಮಾಡುತ್ತಿದ್ದೇವೆ. ಸುಮ್ಮನೆ ಕೂರುವುದು ನನಗೆ ಇಷ್ಟವಿಲ್ಲ. ಹೀಗಾಗಿ ಪಕ್ಷ ಕಟ್ಟುವ ಕೆಲಸದಲ್ಲಿ ನಾನು ತೊಡಗಿದ್ದೇನೆ. ಎಲ್ಲಿಗೆ ಕರೆದರೂ ಹೋಗುತ್ತೇನೆ ಎಂದು ಅವರು ಹೇಳಿದರು.


