ಬೆಂಗಳೂರು: ವೇಗವಾಗಿ ಬಂದ ಕಾರೊಂದು ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯಶವಂತಪುರ ಸರ್ಕಲ್ ನಲ್ಲಿ ತಡರಾತ್ರಿ ಮೂರು ಗಂಟೆಯ ಸುಮಾರಿನಲ್ಲಿ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಕಾರಿನ ಏರ್ ಬ್ಯಾಗ್ ಓಪನ್ ಆದ ಕಾರಣದಿಂದ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಾಹನ ಚಾಲಕ ಕುಡಿದ ಮತ್ತಿನಲ್ಲಿದ್ದ ಎಂದು ಹೇಳಲಾಗುತ್ತಿದ್ದು, ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವಾಹನ ಸಂಚಾರ ದಟ್ಟಣೆ ಕಡಿಮೆ ಇದ್ದ ಕಾರಣದಿಂದ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.