ಬೆಂಗಳೂರು; ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಬ್ಬ ಪಾಕ್ ಪ್ರಜೆಯೂ ಸೇರಿದಂತೆ ನಾಲ್ವರನ್ನು ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಇಬ್ಬರು ಮಕ್ಕಳು ಮತ್ತು ಪತ್ನಿಯ ಜತೆಗೆ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರುವ ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆಯಲಾಗಿದೆ.
ಪಾಕ್ ಮೂಲದ ವ್ಯಕ್ತಿಯೊಬ್ಬ ಪಾಕಿಸ್ತಾನದಲ್ಲಿ ಧಾರ್ಮಿಕ ವಿಚಾರಕ್ಕೆ ಭಿನ್ನಾಭಿಪ್ರಾಯ ಮೂಡಿಸಿಕೊಂಡು, ಅಲ್ಲಿಂದ ದೇಶಬಿಟ್ಟಿದ್ದ. ನಂತರ ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ನೆಲೆಸಿದ್ದ. ಅಲ್ಲಿದ್ದ ವೇಳೆ ಬಾಂಗ್ಲಾದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದರು.
2014 ರಲ್ಲಿ ಬಾಂಗ್ಲಾ ತೊರೆದು ಅಕ್ರಮವಾಗಿ ಭಾರತ ಪ್ರವೇಶಿಸಿದ ಕುಟುಂಬ ದೆಹಲಿಗೆ ಬಂದಿತ್ತು. ದೆಹಲಿಯಲ್ಲಿ ಕೆಲ ಸ್ಥಳೀಯ ವ್ಯಕ್ತಿಗಳ ಸಹಾಯ ಪಡೆದು, ಭಾರತದ ಆಧಾರ್ ಕಾರ್ಡ್, ಪಾನ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ ಎನ್ನಲಾಗಿದೆ.
2018 ರಲ್ಲಿ ತನ್ನ ದಾಖಲೆಗಳನ್ನು ಬಳಸಿಕೊಂಡು ಬೆಂಗಳೂರಿಗೆ ಆಗಮಿಸಿದ ವ್ಯಕ್ತಿ, ಜಿಗಣಿಯ ಅಪಾರ್ಟ್ಮೆಂಟ್ ನಲ್ಲಿ ಮನೆ ಬಾಡಿಗೆ ಪಡೆದು ವಾಸ ಮಾಡುತ್ತಿದ್ದ. ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕುಟುಂಬವನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ವಿಚಾರಣೆ ನಡೆಯಲಿದ್ದು, ಆತನಿಗೆ ಅಕ್ರಮವಾಗಿ ದಾಖಲೆ ಸೃಷ್ಡಿ ಮಾಡಿಕೊಟ್ಟವರು ಯಾರು ಎಂಬ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆತನನ್ನು ರಾಷ್ಟ್ರೀಯ ತನಿಖಾ ತಂಡಗಳು ವಶಕ್ಕೆ ಪಡೆಯುವ ಸಾಧ್ಯತೆ ಇದೆ.