ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ: ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು

Share It

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

82 ನಾಎ ಸಿಟಿ ಸಿವಿಲ್ ಕೋರ್ಟ್ ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಗೇಂದ್ರ ಅವರಿಗೆ ಜಾಮೀನು ನೀಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಹಿಂದುಳಿದ ವರ್ಗಗಳ ಸಚಿವರಾಗಿದ್ದ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 70 ಕೋಟಿ ರು. ಅವ್ಯವಹಾರ ನಡೆದಿದ್ದು, ಇದರಲ್ಲಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು. ನಿಗಮದ ಅಧೀಕ್ಷಕರೊಬ್ಬರ ಆತ್ಮಹತ್ಯೆ ನಂತರ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು.

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. ಆದಾಗ್ಯೂ ಅಕ್ರಮ ಹಣ ವರ್ಗಾವಣೆಯಾಗಿದೆ ಎಂಬ ಆರೋಪದಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡು, ಇಡಿಗೆ ವರ್ಗಾವಣೆ ಮಾಡಿದ್ದ ಕಾರಣ ಇಡಿ ಅಧಿಕಾರಿಗಳು ಸಚಿವ ನಾಗೇಂದ್ರ ಸೇರಿದಂತೆ ಕೆಲವು ಅಧಿಕಾರಿಗಳು ಮತ್ತು ಆಪ್ತರನ್ನು ಬಂಧಿಸಿದ್ದರು.

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದು, ಪ್ರಕರಣದ ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದರು. ಜತೆಗೆ ಬಿಜೆಪಿಯ ಮತ್ತೊಂದು ಟೀಂ ವಾಲ್ಮೀಕಿ ಹಗರಣದ ವಿಚಾರವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸಿತ್ತು.

ಈ ಎಲ್ಲಾ ಬೆಳವಣಿಗೆಯ ನಡುವೆ ನಾಗೇಂದ್ರ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ಹಗರಣದಲ್ಲಿ ಸಚಿವ ನಾಗೇಂದ್ರ ಪಾತ್ರವಿಲ್ಲ ಎಂದು ನಾಗೇಂದ್ರ ಪರ ವಕೀಲರು ವಾದಿಸಿದ್ದರು. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿದ್ದು, ಇಂದು ಅಥವಾ ನಾಳೆ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.


Share It

You cannot copy content of this page