ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ.
ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು.
ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್ಕೌಂಟರ್ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ.
ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು.
ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.