ಬೆಂಗಳೂರು: ರಾಜ್ಯ ಸರಕಾರದ ಬಹುನಿರೀಕ್ಷಿತ ಜಾತಿ ಗಣತಿ ವರದಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಮುಂದಿಟ್ಟು ಜಾರಿಗೊಳಿಸುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.
ಮೈಸೂರಿನಲ್ಲಿ ಬಿಸಿಎಂ ಹಾಸ್ಟೆಲ್ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮದಲ್ಲಿ ಈ ಕುರಿತು ಸುಳಿವು ನೀಡಿರುವ ಸಿಎಂ, ಹಿಂದುಳಿದ ವರ್ಗಗಳ ಆಯೋಗ ತಯಾರಿಸಿರುವ ವರದಿ ಜಾರಿಗೆ ಶೀಘ್ರದಲ್ಲೇ ಚಾಲನೆ ನೀಡುವುದಾಗಿ ಹೇಳಿದ್ದಾರೆ.
ಕಾಂತರಾಜ್ ಆಯೋಗ ರಾಜ್ಯಾದ್ಯಂತ ಇರುವ ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಜಯಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ವರದಿಯ ಪುನರ್ ಪರಿಶೀಲನೆ ನಡೆಸಿ, ಅಂತಿಮವಾಗಿ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದೆ.
ಇದೀಗ ಆ ವರದಿ ಸಿಎಂ ಮುಂದಿದ್ದು, ಶೀಘ್ರದಲ್ಲೇ ಸಚಿವ ಸಂಪುಟದ ಒಪ್ಪಿಗೆ ಪಡೆದು, ವರದಿಯನ್ನು ಜಾರಿಗೊಳಿಸುತ್ತೇವೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಜಾತಿ ಶ್ರೇಣಿ ಮುಂದುವರಿಸಲು ಪ್ರಯತ್ನ ಮಾಡುತ್ತಿವೆ. ಅವರಿಗೆ ಅಹಿಂದ ವರ್ಗಗಳು ಮುಂದೆ ಬರುವುದು ಇಷ್ಟವಿಲ್ಲ ಎಂದು ಕುಟುಕಿದರು.
ಈ ನಡುವೆ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ಹೆಚ್ಚಳ ಮಾಡುವುದು, ಹೋಬಳಿಗೊಂದು ವಸತಿ ಶಾಲೆ ತೆರೆಯುವುದು ಸೇರಿದಂತೆ ಇನ್ನಿತರ ಕ್ರಮಗಳ ಮೂಲಕ ಶೈಕ್ಷಣಿಕ ಸುಧಾರಣೆಗೆ ಕ್ರಮ ವಹಿಸಲಾಗುವುದು ಎಂದರು.