ಬೆಂಗಳೂರು: BMTC ಬಸ್ ಚಾಲಕನ ಮೇಲೆ ಟೆಕ್ಕಿಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ್ದು, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗೃಹಸಚಿವರು ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪತ್ರ ಬರೆದಿದ್ದಾರೆ.
ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಿಳಾ ಟೆಕ್ಕಿಯೊಬ್ಬರು ತಾವು ಕೋರಿದ ಕಡೆ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕ ಹುಸೇನ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈ ಸಂಬಂಧ ಸೂಕ್ತ ಕ್ರಮ ತೆಗೆದುಕೊಂಡು ಇನ್ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮವಹಿಸಬೇಕು ಎಂದು ತಿಳಿಸಿದ್ದಾರೆ.
ಇದೇ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೂ ಪತ್ರ ಬರೆದಿರುವ ಸಚಿವ ರಾಮಲಿಂಗಾ ರೆಡ್ಡಿ, ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಪ್ರಾಣಕ್ಕೆ ಸಂಚಾಕಾರ ತರುವಂತಹ ಪ್ರಯತ್ನವನ್ನೂ ನಡೆಸಿದ್ದಾರೆ. ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯೂ ಈ ಹಿಂದೆ ನಡೆದಿತ್ತು. ಹೀಗಾಗಿ, ಇಂತಹ ನಡೆಯನ್ನು ತಪ್ಪಿಸಲು ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
BMTC, KSRTC ಸೇರಿ ಯಾವುದೇ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆಗೆ ನಮ್ಮ ಇಲಾಖೆ ಬದ್ಧವಾಗಿದ್ದು, ನಮ್ಮ ಇಲಾಖೆಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ಮತ್ತು ಅವಮಾನವನ್ನು ಸಹಿಸುವುದಿಲ್ಲ. ನಮ್ಮ ಸಿಬ್ಬಂದಿಯಿಂದ ಏನಾದರೂ ಪ್ರಮಾದವಾದರೆ, ದೂರು ನೀಡಿ ಸರಿಪಡಿಸಿಕೊಳ್ಳಬಹುದು. ನಾವು ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಹೀಗಾಗಿ, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ. ಇದನ್ನು ತಡೆಯಲು ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಿ ಎಂದು ಮನವಿ ಮಾಡಿದ್ದಾರೆ.
ಘಟನೆಯ ವಿವರ: ಟಿನ್ ಫ್ಯಾಕ್ಟರಿ ಕಡೆಯಿಂದ ಸಿಲ್ಕ್ ಬೋರ್ಡ್ ಕಡೆಗೆ ಹೋಗುತ್ತಿದ್ದ ಬಸ್ ನಲ್ಲಿ ಮಹಿಳಾ ಟೆಕ್ಕಿಯೊಬ್ಬರು ಬಸ್ ನಿಲುಗಡೆಗೆ ತಿಳಿಸಿದ್ದು, ಅವರು ಹೇಳಿದ ಜಾಗದಲ್ಲಿ ಬಸ್ ನಿಲ್ಲಲಿಲ್ಲ ಎಂಬ ಕಾರಣಕ್ಕೆ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಚಾಲಕ ಹುಸೇನ್ ನೀಡಿದ ದೂರಿನ ಅನ್ವರ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈಕೊಂಡನಹಳ್ಳಿಗೆ ಟಿಕೆಟ್ ಪಡೆದು, ಅದಕ್ಕಿಂತ ಮೊದಲೇ ಇಳಿದುಕೊಳ್ಳಲು ಮಹಿಳೆ ಪ್ರಯತ್ನಿಸಿದ್ದು, ಚಾಲಕ ಬಸ್ ನಿಲ್ಲಿಸದೆ ಇದ್ದದ್ದಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ.