ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಸಂಬಂಧ ಒಂದು ವಾರದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಫೈನಾನ್ಸ್ ಸಂಸ್ಥೆಯ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡುವ ಜತೆಗೆ, ತ್ಫು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ವ್ಯವಸ್ಥೆ ಆಗಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಗಳು ಅತಿರೇಕದ ಸಾಲ ನೀಡುತ್ತಿರುವುದು ಸಮಸ್ಯೆಗೆ ಮೂಲ ಕಾರಣ, ಹೀಗಾಗಿ
ಮರುಪಾವತಿ ಸಾಧ್ಯವಾಗದೆ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಸಿಬ್ಬಂದಿ ಕೂಡ ಸಮಸ್ಯೆ ಅನುಭವಿಸಬೇಕು. ಬೇಜವಾಬ್ದಾರಿಯಿಂದ ಸಾಲ ಕೊಡಬಾರದು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಬೇಕು ಎಂದರು.
ಕಾನೂನಿನ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಕ್ರಮ ತೆಗೆದುಕೊಳ್ಳಲು ಯಾವುದೇ ಅವಕಾಶವಿಲ್ಲ, ಆದರೆ, ರಾಜ್ಯ ಸರಕಾರ ಜನರ ಹಿತದೃಷ್ಟಿಯಿಂದ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದರಿಂದ ಜನ ಮತ್ತು ಸಂಸ್ಥೆಗಳಿಗೆ ಎರಡು ಕಡೆ ಸಮಸ್ಯೆಯಿದೆ. ಆದ್ದರಿಂದ ಸೂಕ್ತ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಅವಶ್ಯಕತೆಯಿದ್ದರೆ, ಕಾನೂನಿನ ವ್ಯಾಪ್ತಿಯಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ನಮಗೆ ಸಾಧ್ಯವಿಲ್ಲ. ಆದರೆ, ಅವರು ಸಾಲ ವಸೂಲಾತಿಗೆ ಅನುಸರಿಸುವ ಕ್ರಮಗಳು, ಅವರು ನಿಯಮಮೀರಿ ಸಾಲ ನೀಡಿರುವುದನ್ನು ಪರಿಗಣಿಸಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಅವಕಾಶವಿದೆ. ಹೀಗಾಗಿ, ಆ ನಿಟ್ಟಿನಲ್ಲಿ ಸರಕಾರ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದೆ ಎಂದು ಅವರು ವಿವರಿಸಿದರು.