ನವದೆಹಲಿ: ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದು, ಕೇಂದ್ರದಲ್ಲಿರುವ ಆರ್‌ಎಸ್‌ಎಸ್ ಮತ್ತು ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯುವುದಾಗಿ ಪ್ರತಿಜ್ಞೆ ಮಾಡಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಪಕ್ಷದ ನಾಯಕ ರಾಹುಲ್ ಗಾಂಧಿ, ನಾವು ಸತ್ಯ ಮತ್ತು ಅಹಿಂಸೆಯ ಮೂಲಕ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತುಹಾಕಲು ಪ್ರತಿಜ್ಞೆ ಮಾಡಿದ್ದೇವೆ ಎಂದು ಹೇಳಿದರು.
ನಮ್ಮ ಕಡೆ ಸತ್ಯ ಇದ್ದರೆ, ಅವರ ಕಡೆ ಸತ್ತ (ಅಧಿಕಾರ) ಇದೆ. ಇದನ್ನು ಬಳಸಿಕೊಂಡು ಮತಗಳ್ಳತನ ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಬಿಜೆಪಿ 10 ಸಾವಿರ ರೂಪಾಯಿಗಳನ್ನು ವರ್ಗಾಯಿಸಿದೆ. ಇದರ ವಿರುದ್ಧ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ. ಆಯೋಗವು ಬಿಜೆಪಿ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ. ಇದು ಸತ್ಯ ಮತ್ತು ಅಸತ್ಯದ ನಡುವಿನ ಹೋರಾಟ ಎಂದು ಗುಡುಗಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಸೇರಿ ಹಲವು ನಾಯಕರು ಇದ್ದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರ ಹೆಸರನ್ನು ಉಲ್ಲೇಖಿಸಿ, ಈ ಮೂವರೂ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು
