ಬೆಂಗಳೂರು: ಜಿಬಿಎ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಕಚೇರಿಗೆ ಭೇಟಿ ನೀಡುವ ನಾಗರಿಕರ ಅನುಕೂಲಕ್ಕಾಗಿ ಜಿಬಿಎ ಆವರಣದಲ್ಲಿ ಸುಸಜ್ಜಿತ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯ ಸಮೀಪ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
ಒಟ್ಟು ರೂ. 98 ಲಕ್ಷ ವೆಚ್ಚದಲ್ಲಿ 40×30 ಅಡಿ ವಿಸ್ತೀರ್ಣದ ಜಾಗದಲ್ಲಿ ನೆಲ ಮಹಡಿ ಹಾಗೂ ಮೊದಲ ಮಹಡಿಯನ್ನು ಒಳಗೊಂಡ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಬಿಎ ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಹಾಗೂ ನಾಗರಿಕರಿಗೆ ಗುಣಮಟ್ಟದ ಆಹಾರ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಈ ಮೂಲಕ ಗುಣಮಟ್ಟದ ಉಪಹಾರ, ಕಾಫಿ/ ಟೀ, ಕುಡಿಯುವ ನೀರಿನ ವ್ಯವಸ್ಥೆ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ಕಟ್ಟಡದ ನೆಲ ಮಹಡಿಯಲ್ಲಿ ಸೆಲ್ಫ್ ಸರ್ವೀಸ್ ವ್ಯವಸ್ಥೆ ಮತ್ತು ಮೊದಲ ಮಹಡಿಯಲ್ಲಿ ಸರ್ವೀಸ್ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಕ್ಯಾಂಟೀನ್ ನಲ್ಲಿ ಉಪಹಾರ, ಬೇಕರಿ ತಿನಿಸುಗಳು, ಜ್ಯೂಸ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಉತ್ತಮ ಗುಣಮಟ್ಟವನ್ನು ಕಾಪಾಡಿಕೊಂಡು ಆಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್, ಕೇಂದ್ರ ನಗರ ಪಾಲಿಕೆ ಜಂಟಿ ಆಯುಕ್ತರಾದ ಹೇಮಂತ್ ಶರಣ್, ಕಾರ್ಯಪಾಲಕ ಅಭಿಯಂತರರು ಸೇರಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

