ಮೂಡಲಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಸ್ತುತ ನಡೆಯುತ್ತಿದ್ದು, ಇದರ ವಿವರ ಪಡೆಯಲು ಮೂಡಲಗಿ ತಹಶಿಲ್ದಾರರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ನಿವಾಸಕ್ಕೆ ಭೇಟಿ ನೀಡಿ, ಸಮಗ್ರ ಮಾಹಿತಿ ಪಡೆದುಕೊಂಡರು.
ಮಾಹಿತಿ ನೀಡಿದ ಬಳಿಕ ಮಾತನಾಡಿದ ಮಾಜಿ ಸಂಸದ ಈರಣ್ಣ ಕಡಾಡಿ ಅವರು, “ಮತದಾರರ ಪಟ್ಟಿಯ ಪರಿಷ್ಕರಣೆಯು ಅತ್ಯಂತ ಪ್ರಮುಖ ಕಾರ್ಯವಾಗಿದೆ. ಇದರಿಂದ ನಕಲಿ ಮತದಾರರು ಮತ್ತು ಮೃತಪಟ್ಟವರನ್ನು ಗುರುತಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಸಾಧ್ಯವಾಗುತ್ತದೆ. ಕೇವಲ ಅರ್ಹ ಮತದಾರರ ಹೆಸರುಗಳನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಇದು ಸಹಾಯಕವಾಗುತ್ತದೆ” ಎಂದರು.
ಪಾರದರ್ಶಕ ಮತ್ತು ದೋಷಮುಕ್ತ ಮತದಾರರ ಪಟ್ಟಿ ತಯಾರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಆದ್ದರಿಂದ, ತಾವೆಲ್ಲರೂ ತಮ್ಮ ಮನೆಗೆ ಆಗಮಿಸುವ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸರಿಯಾದ ಮತ್ತು ಸಮಗ್ರ ಮಾಹಿತಿಯನ್ನು ನೀಡಿ ಸಹಕರಿಸಬೇಕಾಗಿ ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.
ಗ್ರಾಮ ಆಡಳಿತ ಅಧಿಕಾರಿ ಭಾರತಿ ಕಾಳೆ ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

