ಅಪರಾಧ ಸುದ್ದಿ

ಯಲ್ಲಮ್ಮ ಜಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಯುವಕನ ಪ್ರಾಣ ಕಿತ್ತುಕೊಂಡ ಭೀಕರ ರಸ್ತೆ ದುರಂತ

Share It

ರಾಯಚೂರು: ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಭಾಗವಹಿಸಿ ಊಟ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದ ಬೈಕ್ ಸವಾರನಿಗೆ ಟಿಪ್ಪರ್ ಡಿಕ್ಕಿ ಹೊಡೆದು, ಆತ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಯಕ್ಲಾಸಪುರ ಸಮೀಪ ಸಂಭವಿಸಿದೆ.

ಮೃತರನ್ನು ಬಸವರಾಜ್ (31) ಎಂದು ಗುರುತಿಸಲಾಗಿದ್ದು, ಅವರು ದೇವದುರ್ಗ ತಾಲೂಕಿನ ಚಡಕಲಗುಡ್ಡ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಬಸವರಾಜ್ ಅವರು ಸಿರವಾರ ತಾಲೂಕಿನ ಕುರಕುಂದ ಗ್ರಾಮದಿಂದ ಪಾಮನಕಲ್ಲೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿಯ ಪ್ರಕಾರ, ಎದುರಿನಿಂದ ಅತಿವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ನಿರತರಾಗಿದ್ದ ಖಾಸಗಿ ಕಂಪನಿಗೆ ಸೇರಿದ ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಶಂಕಿಸಲಾಗಿದೆ.

ಘಟನೆ ನಡೆದ ತಕ್ಷಣ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.


Share It

You cannot copy content of this page