ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಲು ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಸದ್ಯ 22 ವೈದ್ಯ ಕಾಲೇಜುಗಳಿದ್ದು, ಕನಕಪುರ ಮತ್ತು ರಾಮನಗರ ವೈದ್ಯ ಕಾಲೇಜು ಈ ವರ್ಷ ಪ್ರಾರಂಭವಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ತುಮಕೂರು, ಕೋಲಾರ, ದಾವಣಗೆರೆ ಮತ್ತು ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಎಲ್ಲ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಇಲಾಖೆ ಮೂಲಗಳು ತಿಳಿಸಿವೆ. ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ.
ಹಾಗಾಗಿ ಸಂಬಂಧಿಸಿದ ಜಿಲ್ಲೆಯಲ್ಲಿ ಸ್ಥಳ ಆಯ್ಕೆಯಿಂದ ಹಿಡಿದು ಅನೇಕ ಕೆಲಸಗಳನ್ನು ಮಾಡಿಕೊಳ್ಳುವಂತೆ ಸಚಿವರು ಮೌಖಿಕವಾಗಿ ನಿರ್ದೇಶನ ನೀಡಿದ್ದಾರೆ.
ರಾಜ್ಯದಲ್ಲಿರುವ ಹೊಸ ವೈದ್ಯಕೀಯ ಕಾಲೇಜುಗಳಿಗೆ ಕಾಯಕಲ್ಪ ಕೊಡಲು ಮುಂದಾಗಿರುವ ಶರಣ ಪ್ರಕಾಶ್ ಪಾಟೀಲ್, ಅದಕ್ಕಾಗಿ ಹೆಚ್ಚುವರಿ ನೆರವು ಒದಗಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಹಲವು ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಕಲ್ಪಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಆರ್ಥಿಕ ನೆರವು ಅಗತ್ಯವಾಗಿದೆ ಎಂದು ವಿವರಿಸಿದ್ದಾರೆ.
ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಮಗಳೂರು ಸೇರಿ 18 ಕಾಲೇಜುಗಳಿಗೆ ಭೇಟಿ ನೀಡಿರುವ ಸಚಿವರು, ಅಲ್ಲಿಯ ಸ್ಥಿತಿ ಗತಿಗಳನ್ನು ಅಧ್ಯಯನ ಮಾಡಿ ವಾಸ್ತವ ಸಂಗತಿ ಅರಿತಿದ್ದಾರೆ.