ಬೆಂಗಳೂರು: ಇಂದಿನಿಂದ ನಡೆಯಲಿರುವ SSLC ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಕೋರಿರುವ ಅವರು, ಧೈರ್ಯದಿಂದ ಪರೀಕ್ಷೆ ಎದುರಿಸುವಂತೆ ಸಲಹೆ ನೀಡಿದ್ದಾರೆ. ಜತೆಗೆ, ಪರೀಕ್ಷೆ ಸಮಯದಲ್ಲಿ ಸಾರಿಗೆ ಸಂಸ್ಥೆ ಬಸ್ ಗಳು ಮಕ್ಕಳನ್ನು ಉಚಿತವಾಗಿ ಕರದೊಯ್ಯುವಂತೆ ಸಿಬ್ಬಂದಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆ ಹೊರತಾಗಿ ಇತರ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 18 ರಿಂದ ಏ.4 ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಪ್ರಯಾಣ ಮಾಡಬಹುದಾಗಿದೆ.
ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಇದನ್ನು ಅರ್ಹ ವಿದ್ಯಾರ್ಥಿಗಳು ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.

