ಅಪರಾಧ ಸುದ್ದಿ

ಶಬರಿಮಲೆ ಯಾತ್ರೆಯಿಂದ ಹಿಂತಿರುಗುವ ವೇಳೆ ತುಮಕೂರಿನಲ್ಲಿ ಭೀಕರ ಅಪಘಾತ; ನಾಲ್ವರ ದುರ್ಮರಣ

Share It

ತುಮಕೂರು: ಶಬರಿಮಲೆ ಯಾತ್ರೆ ಮುಗಿಸಿ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ತುಮಕೂರು ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ದುರ್ಘಟನೆ ಸಂಭವಿಸಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ನಿವಾಸಿಗಳು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದಾಳೆ ಎಂದು ತಿಳಿದುಬಂದಿದೆ.

ಮೃತರನ್ನು ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಮತ್ತು ಗವಿಸಿದ್ದಪ್ಪ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.


Share It

You cannot copy content of this page