ರಾಜಕೀಯ ಸುದ್ದಿ

3 ಅಸೆಂಬ್ಲಿ ಸೀಟುಗಳ ಬೈ-ಎಲೆಕ್ಷನ್ ಜು.13 ಕ್ಕೆ ಘೋಷಣೆ?

Share It

ಬೆಂಗಳೂರು: ಇದೇ ಜುಲೈ 13 ರಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದು ಮಾಧ್ಯಮ ‌ಪ್ರತಿನಿಧಿಗಳನ್ನು ಆಹ್ವಾನಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ‌ಆಯೋಗ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಅಭ್ಯರ್ಥಿ ಯಾರೆಂದು ಇನ್ನೂ ಸಸ್ಪೆನ್ಸ್ ಆಗೇ ಉಳಿದಿದೆ.‌ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಕೂಡ ಖಚಿತವಾಗಿಲ್ಲ.

ಇನ್ನು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಈ.ತುಕಾರಾಂ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿ ಪುನರಾಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುವುದು ಬಾಕಿ ಇದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಲು ಮಾಜಿ ಸಚಿವ ಬಿ.ಶ್ರೀರಾಮುಲು ರೆಡಿಯಾಗಿದ್ದಾರೆ. ಆದರೆ ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ಎಐಸಿಸಿ ಖಚಿತವಾಗಿ ಏನೂ ಹೇಳಿಲ್ಲ.

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಕಾರಣ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲು ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಜೊತೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಅವರು ಲಾಬಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ಶಿಗ್ಗಾವಿ ಉಪಚುನಾವಣೆಯ ಅಭ್ಯರ್ಥಿ ಯಾರೆಂದು ಇನ್ನೂ ಖಚಿತವಾಗಿಲ್ಲ.
ಒಟ್ಟಾರೆ ಈ 3 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮೂರೂ ಪಕ್ಷಗಳಿಗೆ ಜಟಿಲವಾಗಿದೆ.


Share It

You cannot copy content of this page