ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್

Share It

ಬೆಂಗಳೂರು : ರಾಜ್ಯದ ಹಲವೆಡೆ ಮೇ 19ರಿಂದ 21 ರವರೆಗೆ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆಯಾದರೆ ಇನ್ನು ಕೆಲವಡೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮಳೆಯಾಗುವ ಕರ್ನಾಟಕದ ಪ್ರದೇಶಗಳಲ್ಲಿ 3 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಾಗುವ ಪ್ರದೇಶಗಳ ಗರಿಷ್ಠ ತಾಪಮಾನದಲ್ಲಿ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಬಹುದು ಎಂದೂ IMD ತಿಳಿಸಿದೆ.

ಕರ್ನಾಟಕದಲ್ಲಿ 2023 ರ ಡಿಸೆಂಬರ್​ನಿಂದ ಈ ಏಪ್ರಿಲ್ ವರೆಗೆ ಮಳೆಯಾಗಿರಲಿಲ್ಲ. ಆದರೆ, ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಮತ್ತು ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್​?: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮೇ 21 ರವರೆಗೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಗುಡುಗು, ಮಿಂಚು ಸಹಿತ 7 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಶೇ. 75 ಕ್ಕಿಂತ ಹೆಚ್ಚು ಮತ್ತು ಉತ್ತರ ಒಳನಾಡಿನಲ್ಲಿ ಶೇ. 25ರಿಂದ 50 ರಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಬರುವ ದಿನಗಳಲ್ಲಿ ಗರಿಷ್ಠ ನಿರೀಕ್ಷಿತ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಾರದು ಎಂದೂ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Share It

You cannot copy content of this page