ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್
ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸೋಮವಾರ ಆದೇಶಿಸಿದೆ.
ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಿರುವುದು ಬಿಗ್ ರಿಲೀಫ್ ನೀಡಿದಂತಾಗಿದೆ.
ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ನೀಡಿರುವುದರಿಂದ ನಿರಾಳರಾಗಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದ ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು.
ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು. ಪೂರ್ವಾನುಮತಿ ಪಡೆದು ಈಗಾಗಲೇ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದ್ದಾರೆ. ಆದರೆ, ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.