ಬೆಂಗಳೂರು : ಮುಡಾ ಸೈಟ್ ಹಗರಣದ ಪ್ರಾಸಿಕ್ಯೂಶನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಈಗಾಗಲೇ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ಮುಡಾ ಕೇಸ್ ಪ್ರಾಸಿಕ್ಯೂಶನ್ ತೀರ್ಪು ಪ್ರಕಟಿಸಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಬಹುತೇಕ ಸಚಿವರು ಕಾರ್ಯಪ್ರವೃತ್ತರಾಗಿದ್ದಾರೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ಸೇರಿರುವ ಸಚಿವರು ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಮಾಲೋಚನೆ ನಡೆಸುತ್ತಿದೆ.
ಇದೇ ವೇಳೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿಕೆ ನೀಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವ್ಯವಸ್ಥಿತ ಷಡ್ಯಂತ್ರ ನಡೆಸಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕೆಂದು ರಾಜ್ಯಪಾಲರ ಮೂಲಕ ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಡಿಸಿದೆ.
ಹಿಂದೆ ಇದೇ ರೀತಿ ನನ್ನ ಮೇಲೂ ಸಹ ಐಟಿ, ಇಡಿ ಮೂಲಕ ತನಿಖೆ ನಡೆಸಿ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧನದಲ್ಲಿರುವಂತೆ ರಾಜಕೀಯ ಷಡ್ಯಂತ್ರ ಮಾಡಲಾಗಿತ್ತು. ಆದರೆ ಈಗ ನಾವೆಲ್ಲಾ ಸಚಿವರು ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ನೀಡಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಬೆಂಬಲ ಕೊಡುತ್ತೇವೆ.
ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಏಕೆಂದರೆ ಇನ್ನೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮುಡಾ ಕೇಸ್ ತೀರ್ಪು ಬರುವುದು ಬಾಕಿ ಇದೆ. ಈ ತೀರ್ಪು ಬಂದ ನಂತರವಷ್ಟೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ಸಿಗುತ್ತದೆ ಎಂದು ಹೇಳಿದರು.
ಇದೇ ವೇಳೆ ಸಚಿವರಾದ ಎಚ್.ಕೆ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಸಹ ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಕಾವೇರಿ ನಿವಾಸದಲ್ಲಿ ಮುಂದೇನು ಮಾಡಬೇಕು ಎಂದು ಸಮಾಲೋಚನೆ ನಡೆಸುತ್ತಿದ್ದಾರೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸಿ ನಂತರ ರಾತ್ರಿ ಅಥವಾ ನಾಳೆ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿ ಅಲ್ಲಿ ಎಐಸಿಸಿ ಕಚೇರಿಗೆ ಭೇಟಿ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ನಾಳೆ ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ನಲ್ಲಿ ಮುಡಾ ಪ್ರಾಸಿಕ್ಯೂಶನ್ ವಿರುದ್ಧ ಮೇಲ್ಮನವಿ ಸಲ್ಲಿಸಲು ವಕೀಲರಾದ ಪೊನ್ನಣ್ಣ ಹಾಗೂ ಪ್ರೊ.ರವಿಕುಮಾರ್ ವರ್ಮಾ ಅವರ ಜೊತೆ ಚರ್ಚೆ ನಡೆಸಲಿದ್ದಾರೆ.

