ಬೆಂಗಳೂರು, ಮಾ.3: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗದಂತೆ ಯಾರೂ ತಡೆಯಲಾರರು ಅಂತ ಹೇಳಿರುವುದಕ್ಕೆ ವಿಧಾನಸೌಧದ ಆವರಣದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಎಂ.ಬಿ ಪಾಟೀಲ್, ಮೊದಲಿಗೆ ಮೊಯ್ಲಿ ಹೇಳಿದ್ದು ಸರಿಯಲ್ಲ ಅಂತ ಹೇಳಿದರೂ ನಂತರ ತಮ್ಮ ಹೇಳಿಕೆ ಬದಲಾಯಿಸಿ, ಮೊಯ್ಲಿ ಅವರು ಪಕ್ಷದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯರೂ ಅಗಿರುವುದರಿಂದ ಅವರ ಬಗ್ಗೆ ಮಾತಾಡುವಷ್ಟು ದೊಡ್ಡವನು ತಾನಲ್ಲ ಎಂದಿದ್ದಾರೆ.
ಆದಾಗ್ಯೂ ಕಾಂಗ್ರೆಸ್ ಹೈಕಮಾಂಡ್ ಅಷ್ಟೇ ಮೊಯ್ಲಿ ಅವರ ಹೇಳಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದರು.
ಉಡುಪಿಯಲ್ಲಿ ನಿನ್ನೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವಾರು ಕೈ ನಾಯಕರು ಭಾಗವಹಿಸಿದ್ದರು. ಸನ್ಮಾನ ನಂತರ ಮಾತನಾಡಿದ್ದ ವೀರಪ್ಪ ಮೊಯ್ಲಿ ಅವರು “ಮುಂದೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗದಂತೆ ತಡೆಯಲು ಯಾರಿಂದಲೂ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅವರ ಎದುರೇ ಹೇಳಿ ಎಲ್ಲರನ್ನೂ ಚಕಿತಗೊಳಿಸಿದ್ದರು.