ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ರೂ.63.34 ಕೋಟಿಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಉದ್ದೇಶಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಸ್ಥಾಪನೆಯನ್ನು ಈ ಹಿಂದೆಯೇ ಆರಂಭಿಸಲಾಗಿತ್ತು. ಆದರೆ ಅಗತ್ಯ ಅನುದಾನ ಕೊರತೆಯಿಂದ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ಬಂದಂತಹ ರೋಗಿಗಳನ್ನು ಮಂಗಳೂರು, ಬೆಂಗಳೂರು ಸೇರಿ ಬೇರೆ ಆಸ್ಪತ್ರೆಗಳಿಗೆ ವರ್ಗಾಯಿಸಲಾಗುತ್ತಿದೆ.
ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸೂಪರ್ ಸ್ಪೇಷಲಿಟಿ ಆಸ್ಪತ್ರೆಯ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಒದಗಿಸುವುದು ಈಗಿನ ತುರ್ತು ಅವಶ್ಯಕವಾಗಿರುತ್ತದೆ. ಹೀಗಾಗಿ ಇದನ್ನು ಪೂರೈಸಲು ಮನವಿ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಮನವಿಗೆ ಸ್ಪಂದಿಸಿ, ಈ ವಿಚಾರಕ್ಕೆ ಪರಿಹಾರ ನೀಡಲು ಸೂಚಿಸಿದ್ದರು.
ಸದರಿ ಕಾಮಗಾರಿ ಪೂರ್ಣಗೊಳಿಸಲು ಬೇಕಾಗಿರುವ ಹೆಚ್ಚುವರಿ ಮೊತ್ತದ ಮಂಜೂರಾತಿಗಾಗಿ ಸಚಿವ ಸಂಪುಟದ ಮುಂದೆ ತರಲಾಗಿತ್ತು. ಅದರಂತೆ ಈ ಬಗ್ಗೆ ಚರ್ಚೆ ನಡೆಸಿದ ಸಂಪುಟ ಸಭೆ ರೂ.63.34 ಕೋಟಿಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ ಹಾಸನ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಸಂಪೂರ್ಣವಾಗಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.