ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ 14 ಕ್ಷೇತ್ರಗಳ ಲೋಕಸಭಾ ಚುನಾವಣೆಗೆ ಮತದಾನ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಧಿಕಾರಿಗಳು ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಜೊತೆಗೆ 70 ಕಂಪನಿ ಕೇಂದ್ರ ಪಡೆಗಳು, 150 ಫ್ಲಟೂನ್ ಕೆಎಸ್‌ಆರ್‌ಪಿ, ಡಿಎಆರ್ ಪ್ಲಟೂನ್‌ಗಳನ್ನು ನಿಯೋಜಿಸಲಾಗಿದೆ ಎಂದರು.
ಬೆಂಗಳೂರು, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಿಂದಲೂ ಸಹ 2ನೇ ಹಂತದ ಮತದಾನಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಮತದಾನ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.