ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ: ವ್ಯಕ್ತಿಗೆ ಗಂಭೀರ ಗಾಯ
ಬೆಂಗಳೂರು: ಬೆಂಗಳೂರಿನಲ್ಲಿ ಅಪರಿಚಿತ ವಾಹನವೊಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಆತ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ನಡೆದಿದೆ.
ನಗರದ ವಿನ್ಸರ್ ಮ್ಯಾನರ್ ಬಳಿಯ ಬಳ್ಳಾರಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡಿ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಮತ್ತು ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ರಾತ್ರಿ ಸುಮಾರು ೧೧ ಗಂಟೆಯ ಸುಮಾರಿನಲ್ಲಿ ವಿನ್ಸರ್ ಮ್ಯಾನರ್ ಬಳಿಯ ಲೀ ಮೆರಿಡಿಯನ್ ಹೋಟೆಲ್ ಮುಂಭಾಗ ವ್ಯಕ್ತಿಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರು. ಇದನ್ನು ಕಂಡ ಇತರ ವಾಹನದ ಚಾಲಕರು ಆತನ ಸಹಾಯಕ್ಕೆ ಬಂದರು. ಪೊಲೀಸರಿಗೆ ಮಾಹಿತಿಯನ್ನು ನೀಡಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಗೊಂಡ ವ್ಯಕ್ತಿಯನ್ನು ಆಸ್ಫತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಅಪಘಾತ ನಡೆಸಿದ ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.


