ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಪ್ರಕರಣ ರದ್ದು ಕೋರಿ ಬಿಜೆಪಿ ನಾಯಕ ಆರ್.ಅಶೋಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್, ಅಶೋಕ್ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ, ಪ್ರಕರಣದ ತನಿಖೆ ನಡೆಸಲು 2018ರಲ್ಲಿ ಆದೇಶ ನೀಡಿತ್ತು. ಬಳಿಕ ಇದನ್ನು ಪ್ರಶ್ನಿಸಿ ಅಶೋಕ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.
ಆರ್.ಅಶೋಕ್ ಅವರು ಈ ಹಿಂದೆ ಬೆಂಗಳೂರು ಉತ್ತರ ತಾಲ್ಲೂಕು ಬಗರ್‌ಹುಕುಂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದರು. ಆಗ ಸೋಮನಹಳ್ಳಿಯಲ್ಲಿ 8 ಎಕರೆ ಭೂಮಿಯನ್ನು ಅಕ್ರಮ ಮಂಜೂರಾತಿ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಅಶೋಕ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ, ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪ ಹೊರಿಸಿ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್, ಅರ್ಜಿ ವಜಾಗೊಳಿಸಿತ್ತು.
ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ತನಿಖೆ ನಡೆಸಬಹುದು ಎಂದು ಅಭಿಪ್ರಾಯಪಟ್ಟಿದ್ದ ಕೋರ್ಟ್, ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣ ಸಂಬಂಧ ಎಸಿಬಿ ತನಿಖೆ ನಡೆಸಲು ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಆರ್.ಅಶೋಕ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22, 2025ಕ್ಕೆ ಮುಂದೂಡಲಾಗಿದೆ. ರಾಜ್ಯಸರ್ಕಾರದ ಪರವಾಗಿ ವಕೀಲ ಡಿ.ಎಲ್. ಚಿದಾನಂದ ವಾದ ಮಂಡಿಸಿದರು.
ಪ್ರಕರಣದ ಹಿನ್ನೆಲೆ: ಆರ್.ಅಶೋಕ್ 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದಾಗ ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಎ.ಆನಂದ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
ಈ ದೂರು ಆಧರಿಸಿ ಎಸಿಬಿ ಪೊಲೀಸರು ಆರ್.ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ಆರ್.ಅಶೋಕ್, ತಾನು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ತನ್ನ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಜತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್ ಆಧರಿಸಿ ತನ್ನ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಅವರು ಮಧ್ಯಂತರ ಮನವಿ ಮಾಡಿದ್ದರು.