ಚಿತ್ತೂರು: ತಿರುಪತಿ ಹೆದ್ದಾರಿಯಲ್ಲಿ ಬಸ್ ಅಪಘಾತವಾಗಿದ್ದು, 20 ಜನರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆಯಲ್ಲಿ ನಡೆದಿದೆ.
ತಿರುಪತಿಯಿಂದ ತಮಿಳುನಾಡಿನ ತಿರುಚ್ಚಿಗೆ ತೆರಳುತ್ತಿದ್ದ ಬಸ್‌ವೊಂದು ಚಿತ್ತೂರು ಬಳಿಯ ಗಂಗಸಾಗರ ಬಳಿ ಅಪಘಾತಕ್ಕೀಡಾಗಿದೆ. ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.
ಅಪಘಾತದಲ್ಲಿ ಸುಮಾರು 20 ಪ್ರಯಾಣಿಕರು ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿತ್ತೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡಿರುವ ಕೆಲವು ಪ್ರಯಾಣಿಕರನ್ನು ವೇಲೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯಿಂದಾಗಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಕೈಜೋಡಿಸಿದ್ದಾರೆ ಎನ್ನಲಾಗಿದೆ.