ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಶಾಲಾ ಕೊಠಡಿಯಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜಿಲ್ಲೆಯ ಆಳಂದ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲೆಯಲ್ಲಿ ಬಿಸಿ ಊಟ ಮುಗಿಸಿ, ಕ್ಲಾಸ್ ರೂಮಿಗೆ ತೆರಳುತ್ತಿದ್ದ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಬಾಲಕಿಯ ಹಿಂದೆಯೇ ಹೋದ ಶಿಕ್ಷಕ, ತರಗತಿ ಬಾಗಿಲು ಮುಚ್ಚಿ, ಬಾಲಕಿಯಿಂದ ಕಿಟಕಿಗಳನ್ನು ಮುಚ್ಚಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಆಗ ಬಾಲಕಿ ಚೀರಾಡಿದ್ದು, ಆತ ಅಲ್ಲಿಂದ ಪರಾರಿಯಾಗಿದ್ದಾನೆ.
ಬಾಲಕಿ ಮನೆಗೆ ಹೋಗಿ ಪೋಷಕರಿಗೆ ನಡೆದ ಘಟನೆಯ ಬಗ್ಗೆ ತಿಳಿಸಿದ್ದು, ಪೋಷಕರು ಮುಖ್ಯೋಪಾಧ್ಯಯರ ಗಮನಕ್ಕೆ ತಂದು ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿ, ಜೈಲಿಗೆ ಕಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಕಲೆ ಹಾಕಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ವರದಿ ಸಲ್ಲಿಸಿದ್ದರು. ವರದಿ ತಲುಪಿದ ಬಳಿಕ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.