ಶಸ್ತ್ರಚಿಕಿತ್ಸೆ ನಂತರ ಯುವತಿ ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ
ಕೋಲಾರ ; ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಆಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ದೀಪ್ತಿ ಎಂಬ ಯುವತಿಯನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆನೋವಿನಿಂದ ಬಳಲುತಿದ್ದ ಆಕೆಗೆ ಗುರುವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ಶಸ್ತ್ರಚಿಕಿತ್ಸ ನಂತರ ಸಂಜೆಯ ವೇಳೆಗೆ ಯುವತಿ ದೀಪ್ತಿ ಸಾವನ್ನಪ್ಪಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ನಂತರ ಹೃದಯಾಘಾತದಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಣೆ ಮಾಡಿದ್ದರು.
ಆದರೆ, ಪೋಷಕರು ಆಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಕೊಟ್ಟಿದ್ದ ಅನೇಸ್ತೇಷಿಯಾ ಹೆಚ್ಚಾಗಿ ಆಕೆ ಮೃತಪಟ್ಟಿದ್ದಾಳೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಗೊಂದಲ ಏರ್ಪಟ್ಟಿದೆ. ಯುವತಿಯ ಸಂಬಂಧಿಕರೆಲ್ಲ ಸೇರಿ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ ಎನ್ನಲಾಗಿದೆ.


