ಬೆಂಗಳೂರು: ವಿದ್ಯುತ್ ಮೋಟಾರ್ ಸಂಪರ್ಕ ಕಲ್ಪಿಸಲು ಹೋಗಿ 45 ವರ್ಷದ ಮನೆಕೆಲಸದಾಕೆಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
ಘಟನೆಯಲ್ಲಿ ಸೆಲ್ವಿ ಎಂಬ 45 ವರ್ಷದ ಮನೆಕೆಲಸದಾಕೆ ಮೃತಪಟ್ಟಿದ್ದು, ವಿಧೆವೆಯಾದ ಆಕೆ ಇಬ್ಬರು ಹೆಣ್ಣು ಮಕ್ಕಳು ಸೇರಿ ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಆಕೆಯ ಸಾವಿನ ನಂತರ ಸ್ಥಳೀಯರು ಬೆಸ್ಕಾಂ ಮತ್ತು ಬಿಬಿಎಂಪಿ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಸ್ಥಳಕ್ಕೆ ಸ್ಥಳೀಯ ಶಾಸಕರಾದ ಜಮೀರ್ ಅಹಮದ್ ಬದಲಿಗೆ ಅವರ ಪಿಎ ಆಗಮಿಸಿದ್ದನ್ನು ವಿರೋಧಿಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಸಚಿವರು ಆಗಮಿಸಿ ನಮ್ಮ ಸಮಸ್ಯೆಯನ್ನು ಆಲಿಸಬೇಕು ಎಂದು ಆಗ್ರಹಿಸಿದರು.
ಇದೇ ಸ್ಥಳದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ನಾಲ್ವರು ವಿದ್ಯುತ್ ಶಾಕ್‌ನಿಂದ ಮೃತಪಟ್ಟಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಯಾವುದೇ ಕ್ರಮ ತೆಗೆದುಕೊಳ್ಳದ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಡೆಯಿಂದ ಸರಣಿ ಸಾವುಗಳು ಮುಂದುವರಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.