ಧಾರವಾಡ ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಇಂದು ಕಾರ್ಯಾಚರಣೆ
ಧಾರವಾಡ: ಧಾರವಾಡದ ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇಂದು ಅರಣ್ಯ ಇಲಾಖೆ ಚಿರತೆ ಬಂಧಿಸಲು ಕಾರ್ಯಾಚರಣೆ ನಡೆಸಲಿದೆ.
ಕರ್ನಾಟಕ ವಿವಿಯ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರೂ ಚಿರತೆ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಭಾನುವಾರ ಕಾರ್ಯಾಚರಣೆ ನಡೆಸಿ, ಚಿರತೆ ಸೆರೆಹಿಡಿಯಲು ನಿರ್ಧರಿಸಲಾಗಿದೆ.
ಚಿರತೆ ಸೆರೆಗೆ ಕಾರ್ಯಾಚರಣೆ ನಡೆಯುವ ಕಾರಣದಿಂದ ವಿವಿ ಆವರಣದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ವಿದ್ಯಾರ್ಥಿಗಳು ಕೂಡ ರಸ್ತೆಗೆ ಬರದಂತೆ ಸೂಚನೆ ನೀಡಲಾಗಿದೆ. ಹಾಸ್ಟೆಲ್ ವಿದ್ಯಾರ್ಥಿಗಳು ಕೊಠಡಿ ಬಿಟ್ಟು ಬರದಂತೆ ಸೂಚಿಸಲಾಗಿದೆ.
ಧಾರವಾಡ ಜಿಲ್ಲೆಯ ಅರಣ್ಯ ಇಲಾಖೆ, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಯಲಿದೆ. ಸಾರ್ವಜನಿಕರು ಸಹಕರಿಸಿ, ಚಿರತೆ ಸೆರೆಗೆ ಅನುಕೂಲ ಮಾಡಿಕೊಡಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿಕೊಂಡಿದೆ.


