ರಾಜಕೀಯ ಸುದ್ದಿ

ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

Share It

ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಎದುರಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ. ಮತ್ತು ಸೌಹಾರ್ದಯುತವಾಗಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಪಿ ಯೋಗೇಶ್ವ‌ರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ. ಅವರು ಕಾಂಗ್ರೆಸ್ ಸೇರಿರುವುದು ದೊಡ್ಡ ದುರಂತ. ಕಾಂಗ್ರೆಸ್‌ಗೆ ಯಾರೂ ಅಭ್ಯರ್ಥಿ ಇರಲಿಲ್ಲ. ಅಲ್ಲಿ ಸುಲಭವಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬಹುದು.

ಈಗಲೂ ಆ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಭಾವ ಇದೆ. ಹಿಂದೆ ಬಿಜೆಪಿ ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳು ಸ್ಪರ್ಧೆ ಮಾಡಿ ತಿಕೋನ ಸ್ಪರ್ಧೆ ಇದ್ದಾಗಲೂ ಕುಮಾರಸ್ವಾಮಿಯವರು ಗೆಲುವು ಸಾಧಿಸಿದ್ದಾರೆ. ಈ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.


Share It

You cannot copy content of this page