ಎಚ್ ಡಿಕೆ ವಿರುದ್ಧ ಬಲವಂತದ ಕ್ರಮ ಬೇಡವೆಂದು ಪೊಲೀಸರಿಗೆ ಸೂಚನೆ ನೀಡಿದ ಹೈಕೋರ್ಟ್

Share It

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ಆಧರಿಸಿ ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆ‌ರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಬೇಡವೆಂದು ಪೊಲೀಸರಿಗೆ ಸೂಚನೆ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಸುದ್ದಿಗೋಷ್ಠಿಯಲ್ಲಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜತೆಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ವಿರುದ್ಧ ಚಂದ್ರಶೇಖರ್ ದೂರು ನೀಡಿದ್ದರು.

ಈಗ ಈ ಮೂವರು ನಾಯಕರು ಎಫ್‌ಐಆ‌ರ್ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪ್ರಕರಣ ಸಂಬಂಧ ಪೊಲೀಸರು ಯಾವುದಾದರು ಕ್ರಮಕ್ಕೆ ಮುಂದಾದಲ್ಲಿ ತಕ್ಷಣ ನ್ಯಾಯಪೀಠದ ಕದ ತಟ್ಟಬಹುದು ಎಂದು ನ್ಯಾಯಪೀಠ ಹೇಳಿದೆ.

ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕೋರ್ಟ್ ಗೆ ಗೈರಾಗಿದ್ದರು. ಎಚ್‌ಡಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮುಂದಿನ ವಿಚಾರಣೆಗೆ ಕಡ್ಡಾಯ ಹಾಜರಾತಿಗೆ ಸೂಚಿಸಿದೆ.

ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯ 3 ಎಕರೆ 34 ಗುಂಟೆ ಭೂಮಿ ಡಿನೋಟಿಫಿಕೇಶನ್ ಮಾಡಿರುವ ಸಂಬಂಧ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಚಾಮರಾಜನಗರದ ಮಹಾದೇವಸ್ವಾಮಿ ದೂರು ಸಲ್ಲಿಸಿದ್ದರು.

ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ಕೈಗೊಂಡಿದೆ. ಕುಮಾರಸ್ವಾಮಿ ಗೈರು ಆಗಿದ್ದರಿಂದ ಅವರ ಪರ ವಕೀಲರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಎಷ್ಟು ಬಾರಿ ನಿಮಗೆ ಅವಕಾಶ ಕೊಡುವುದು ಎಂದು ತರಾಟೆಗೆ ತೆಗೆದುಕೊಂಡಿದೆ.


Share It

You May Have Missed

You cannot copy content of this page