ಪಂಚಮಸಾಲಿ ಮೀಸಲಾತಿ ಹೋರಾಟ: ಡಿ. 10 ಕ್ಕೆ ಸುವರ್ಣ ಸೌಧಕ್ಕೆ ಮುತ್ತಿಗೆ
ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ ಎರಡು ಎ ಅಡಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿಸೆಂಬರ್ 10 ರಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಚಿಕ್ಕೋಡಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, 5000 ಟ್ರ್ಯಾಕ್ಟರ್ ಮತ್ತು ಸಾವಿರಾರು ಪಂಚಮಸಾಲಿ ಸಮಾಜ ಬಾಂಧವರು ಭಾಗವಹಿಸಲಿದ್ದಾರೆ. ಅಂದು ನಡೆಯುವ ಪ್ರತಿಭಟನೆ ತಡೆಯಲು ಅಥವಾ ಹತ್ತಿಕ್ಕಲು ಪ್ರಯತ್ನಿಸಿದರೆ ಸರಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ರವಾನಿಸಿದರು.
ಪಂಚಮಸಾಲಿ ಸಮುದಾಯಕ್ಕೆ ಎರಡು ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ ಇದ್ದಾಗ ಸುವರ್ಣ ವಿಧಾನಸೌಧದ ಎದುರು ಉಪವಾಸ ಸತ್ಯಾಗ್ರಹ, ಹೋರಾಟ ಮಾಡಲಾಗಿತ್ತು ಎಂದು ಅವರು ನೆನಪಿಸಿದರು.
ಸರಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಲು ಹಿಂದೇಟು ಹಾಕುತ್ತಿದೆ. ಈ ನಿಟ್ಟಿನಲ್ಲಿ ಪಂಚಮಸಾಲಿ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಬಗ್ಗೆ ಹೋರಾಟದ ರೂಪುರೇಷೆ ರೂಪಿಸಲು ಡಿಸೆಂಬರ್ 7ರಂದು ಬೆಳಗಾವಿಯಲ್ಲಿ ಸಮಾಜದ ಸಚಿವರು, ಶಾಸಕರು, ಮಾಜಿ ಶಾಸಕರು, ವಕೀಲರು ಹಾಗೂ ಮುಖಂಡರ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.


