ಬೆಂಗಳೂರು: ಮೈಸೂರಿನ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ಸಂಬಂಧ ಪ್ರಸ್ತಾವನೆ ರೆಡಿಯಾಗಿದ್ದು, ಇದಕ್ಕೆ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.
ಬಿಜೆಪಿಯ ಕೆಲ ನಾಯಕರು ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋದಿಸಿದ್ದರೆ, ಪ್ರತಾಪ್ ಸಿಂಹ, ಬಸವರಾಜ ಬೊಮ್ಮಾಯಿ ಸೇರಿ ಕೆಲ ನಾಯಕರು ಸ್ವಾಗತಿಸಿದ್ದಾರೆ. ಒಟ್ಟಾರೆ ಸಿದ್ದರಾಮಯ್ಯ ಅವರ ಹೆಸರಿಡುವ ಪಾಲಿಕೆಯ ನಿರ್ಧಾರ ಇದೀಗ ವಿವಾದಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರಿಡಲು ಮೈಸೂರು ಮಹಾನಗರ ಪಾಲಿಕೆ ಸಾರ್ವಜನಿಕ ಒತ್ತಡದ ಹಿನ್ನೆಲೆಯಲ್ಲಿ ಪ್ರಸ್ತಾವನೆ ಹೊರಡಿಸಿದೆ. ಈ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದು, ಮೂಡಾ ದೂರುದಾರ ಸ್ನೇಹಮಯಿ ಕೃಷ್ಣ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಹೆಸರಿಡುವುದು ಯಾವ ಪುರುಷಾರ್ಥಕ್ಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ಷೇಪ ವ್ಯಕ್ತಪಡಿಸಿದರೆ, ಮಾಜಿ ಸಂಸದ ಪ್ರತಾಪ್ ಸಿಂಹ, ‘ಸಿದ್ದರಾಮಯ್ಯ ಮೈಸೂರಿನ ಸುಪುತ್ರ, ಅವರ ಹೆಸರಿಡುವುದನ್ನು ವಿರೋಧಿಸುವುದು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಎಂದಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಹೆಸರಿಡಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದು ಹೇಳಿದ್ದಾರೆ. ಆ ಮೂಲಕ ಕೆಲ ಬಿಜೆಪಿ ನಾಯಕರೇ ಮಾಡಿರುವ ವಿರೋಧಕ್ಕೆ ಟಾಂಗ್ ನೀಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಹೆಸರಿನಲ್ಲಿ ವಿವಾದಗಳು ಮುಂದುವರಿದಿವೆ.