ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ಜನಪ್ರತಿನಿಧಿಗಳ ನ್ಯಾಯಾಲಯ ಒಪ್ಪಿಗೆ ನೀಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದ ಮನವಿಯ ಮೇಲೆ ವಿಚಾರಣೆ ನಡೆಸಿದ 42 ನೇ ಜನಪ್ರತಿನಿಧಿಗಳ ನ್ಯಾಯಾಲಯ ಇನ್ ಕ್ಯಾಮೆರಾ ವಿಚಾರಣೆಗೆ ಸಮ್ಮತಿ ನೀಡಿತು. ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಬಹುದು ಎಂದು ಹೇಳುವ ಮೂಲಕ ಮಾಧ್ಯಮ ಮತ್ತು ಜನರ ಮುಂದೆ ತೆರೆದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ತಡೆ ನೀಡಿತು.
ವಿಡಿಯೋ ಮತ್ತು ಫೋಟೋಗಳ ವೀಕ್ಷಣೆಗೆ ಕಾಲಾವಕಾಶ ನೀಡಬೇಕು. ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಯಬೇಕು ಎಂದು ಪ್ರಜ್ವಲ್ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಎಸ್ಐಟಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ನ್ಯಾಯಾಲಯ ಅಂತಿಮವಾಗಿ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಿತು.