ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಿ, ಸರಕಾರ ಸುಗ್ರೀವಾಜ್ಞೆ ಜಾರಿಗೆ ಮುಂದಾಗಿದ್ದರೂ ಕಿರುಕುಳ ತಪ್ಪಿಲ್ಲ. ಈ ಹಿನ್ನೆಲೆಯಲ್ಲಿ ಖಾಕಿ ಕಾರ್ಯಾಚರಣೆಗೆ ಇಳಿದಿದ್ದು, ಏಳು ಪ್ರಕರಣ ದಾಖಲು ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿ ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಸುಗ್ರೀವಾಜ್ಞೆ ತರುವ ತೀರ್ಮಾನ ಕೈಗೊಂಡಿದ್ದರು. ಆದರೂ, ಕೆಲವು ಕಂಪನಿ ಸಿಬ್ಬಂದಿ ‘ ದುಡ್ಡೇನ್ ಸಿದ್ದರಾಮಯ್ಯ ಕಡ್ತಾರಾ? ಎಂಬ ಉಡಾಫೆಯ ಮಾತನ್ನಾಡಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರೊಚ್ಚಿಗೆದ್ದಿದ್ದು, ಭಾನುವಾರ ಒಂದೇ ದಿನ ರಾಜ್ಯದಲ್ಲಿ ಏಳು ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮಾಹಿತಿ ನೀಡಿದ್ದು, ಕಿರುಕುಳ ಕಂಡುಬಂದಲ್ಲಿ ದೂರು ನೀಡಿ, ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಈವರೆಗೆ ಏಳು ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕೆಲವು ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದರೆ ಎನ್ ಸಿಆರ್ ಮಾಡಿ ಸಾಗಹಾಕಲಾಗುತ್ತಿದೆ ಎಂಬ ದೂರುಗಳು ಬಂದಿದ್ದು, ಪೊಲೀಸರು ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ತಾಳಕ್ಕೆ ಕುಣಿಯುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ಕೆಲವು ಸಂಘಟನೆಗಳು ಈ ಕುರಿತು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಸರಕಾರ ಒಂದು ಕಡೆ ಸುಗ್ರೀವಾಜ್ಞೆ ತರಲು ಮುಂದಾಗಿದ್ದರೆ, ಪೊಲೀಸರು ಕಿರುಕುಳ ನೀಎಉವವರ ವಿರುದ್ಧ ಕ್ರಮಕ್ಕೆ ಮುಂದಾಗುತ್ತಿದ್ದಾರೆ. ಈ ನಡುವೆ ಕಿರುಕುಳದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚೆಚ್ವು ಬೆಳಕಿಗೆ ಬರುತ್ತಿವೆ. ಒಟ್ಟಾರೆ, ಇಷ್ಟೆಲ್ಲ ಬೆಳವಣಿಗೆಗಳು ರಾಜ್ಯದಲ್ಲಿ ಆತಂಕ ಸೃಷ್ಟಿಸಿವೆ.