ಭೋವಿ ನಿಗಮದ ಹಗರಣ: ಇ.ಡಿಯಿಂದ ಅಕ್ರಮ ಹಣ ವರ್ಗಾವಣೆ ಪತ್ತೆ
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ.ಕೆ ನಾಗರಾಜಪ್ಪರನ್ನು ಬಂಧಿಸಿದ್ದು, 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಇ.ಡಿ ತನಿಖೆ ವೇಳೆ ಭೋವಿ ಸಮುದಾಯದ ಏಜೆಂಟರ ಮೂಲಕ ಅಕ್ರಮ ಹಣ ವರ್ಗಾವಣೆ ನಡೆದಿದ್ದು ಪತ್ತೆಯಾಗಿದೆ. ಹೀಗಾಗಿ ಬಿ.ಕೆ ನಾಗರಾಜಪ್ಪರನ್ನು ಬಂಧಿಸಿ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ.
ಏಪ್ರಿಲ್ 4ರಂದು ನಗರದ ಅಂಬೇಡ್ಕರ್ ರಸ್ತೆಯ ವಿವಿ ಟವರ್ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು ಮತ್ತು ಅನುಮಾನ ಇರುವವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಇಡಿ ಅಧಿಕಾರಿಗಳು ಶೋಧ ಮಾಡಿದ್ದರು. ಈ ವೇಳೆ ನಾಗರಾಜಪ್ಪ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದು ಪತ್ತೆ ಆಗಿದೆ.
ನಕಲಿ ಫಲಾನುಭವಿಗಳ ಖಾತೆ ಬಳಸಿಕೊಂಡು ಕೆಬಿಡಿಸಿಯಿಂದ ಹಣವನ್ನು ಫ್ರೆಂಡ್ಸ್, ಕುಟುಂಬ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದಡಿ ಬಂಧಿಸಲಾಗಿದೆ. ಬಳಿಕ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ಇ.ಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂ. ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು.
ಬಳಿಕ ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ
ಸುಬ್ಬಪ್ಪ, ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿತ್ತು.
ಇತ್ತೀಚೆಗೆ ರಾಜ್ಯಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿತ್ತು. ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು. ಇದೇ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ, ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.


