ನವದೆಹಲಿ: ಒಟಿಟಿ ಪ್ಲಾಟ್‌ಫಾರಂಗಳಲ್ಲಿ ಅಶ್ಲೀಲ ವಿಡಿಯೋ ಮತ್ತು ವಿಷಯಗಳನ್ನು ಭಿತ್ತರಿಸದಂತೆ ತಡೆಯುವುದು ಕಾರ್ಯಾಂಗ ಮತ್ತು ಶಾಸಕಾಂಗದ ಜವಾಬ್ದಾರಿ. ಹೀಗಾಗಿ, ಇದನ್ನು ಕೇಂದ್ರ ಸರಕಾರವೇ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಸಂಬಂಧ ಕೇಂದ್ರ ಸರಕಾರಕ್ಕೆ ನೊಟೀಸ್ ನೀಡಿರುವ ನ್ಯಾ. ಬಿ.ಆರ್.ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರಿದ್ಧ ವಿಭಾಗೀಯ ಪೀಠ, ಅಶ್ಲೀಲ ವಿಷಯಗಳನ್ನು ನಿಯಂತ್ರಿಸುವ ಕ್ರಮಗಳನ್ನು ಕೈಗೊಳ್ಳುವುದು ಕಾರ್ಯಾಂಗ ಮತ್ತು ಶಾಸಕಾಂಗದ ಕೆಲಸ. ಈಗಾಗಲೇ, ನ್ಯಾಯಾಲಯ ಕಾರ್ಯಾಂಗದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ಆರೋಪಗಳಿವೆ. ಹೀಗಾಗಿ, ಇದು ನಿಮ್ಮದೇ ಜವಾಬ್ದಾರಿ ಎಂದು ಹೇಳಿದೆ.
ಈ ನಡುವೆ ಕೆಲವು ನಿಬಂಧನೆಗಳು ಈಗಾಗಲೇ ಜಾರಿಯಲ್ಲಿವೆ. ಮತ್ತಷ್ಟು ನಿಬರ್ಂಧಗಳನ್ನು ಜಾರಿಗೆ ತರಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸರಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಆನ್‌ಲೈನ್‌ನಲ್ಲಿ ಅಶ್ಲೀಲ ಮತ್ತು ಲೈಂಗಿಕ ವಿಷಯಗಳ ಪ್ರದರ್ಶನದ ಕುರಿತು ವಿಷಯ ಸಂಬಂಧಿ ಪ್ರಾಧಿಕಾರ ರಚನೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಸಲಹೆ ನೀಡಿದೆ.
ಇಂಡಿಯಾಸ್ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ರಣವೀರ್ ಅಲ್ಲಾಹಬಾಡಿಯಾ ಅವರ ಜತೆಗೆ ಸಮಯ್ ರೈನಾ ಅವರ ಕಮೆಂಟ್‌ಗೆ ಸಂಬಂಧಿಸಿದಂತೆ ಸೃಷ್ಟಿಯಾದ ವಿವಾದದ ಹಿನ್ನೆಲೆಯಲ್ಲಿ ಈ ಅಂಶವನ್ನು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಮತ್ತು ನೈತಿಕ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ನ್ಯಾಯಾಲಯ ಸರಕಾರಕ್ಕೆ ಸಲಹೆ ನೀಡಿದೆ.