ಉಪಯುಕ್ತ ಸುದ್ದಿ

8 ವರ್ಷಗಳ ಬಳಿಕ KSRTC ನೇಮಕಾತಿ: ಇಂದು 2000 ಚಾಲಕ-ಕಂ-ನಿರ್ವಾಹಕರಿಗೆ ಆದೇಶ ವಿತರಣೆ

Share It

ಬೆಂಗಳೂರು : KSRTCಯ ಚಾಲಕ ಕಂ ನಿರ್ವಾಹಕ ಹುದ್ದೆಗೆ ಆಯ್ಕೆಯಾದ 2000 ಅಭ್ಯರ್ಥಿಗಳಿಗೆ ಇಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಆದೇಶ ಪತ್ರ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಸಚಿವರು, ಚಾಲನಾ ಸಿಬ್ಬಂದಿ ನೇಮಕಾತಿ ಪಾರದರ್ಶಕವಾಗಿ ನಡೆಸಿದ್ದು, ಮಾನವ ಹಸ್ತಕ್ಷೇಪವಿರುವುದಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿರುತ್ತದೆ. ಹೊಸದಾಗಿ ನೇಮಕಗೊಂಡಿರುವ ಚಾಲನಾ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ‌ನಿರ್ವಹಿಸಬೇಕು.  ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ತಿಳಿಸಿದರು.

ಅಪಘಾತವು ಸಂಭವಿಸಿದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ನಿಗಮವು ಕರೋನಾ ನಂತರ ಹಲವು ಅಡತಡೆಗಳನ್ನು ಎದುರಿಸಿಕೊಂಡು ಆರ್ಥಿಕವಾಗಿ ಯಶಸ್ಸಿನ ಮಾರ್ಗವನ್ನು ನೋಡುತ್ತಿದ್ದು, ಹಲವಾರು ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿರುತ್ತದೆ. ನೌಕರರು ಹಾಗೂ ಅವರ ಅವಲಂಭಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದರು.

ನಾಲ್ಕು ಸಾರಿಗೆ ನಿಗಮಗಳಿಂದ ಸುಮಾರು 1000 ಕ್ಕೂ ಹೆಚ್ಚು ಮೃತರ ಅವಲಂಭಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಈಗಾಗಲೇ 7500 ಹುದ್ದೆಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡಿರುತ್ತದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ ರೂ.1 ಕೋಟಿ ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿ ಕುಟುಂಬಕ್ಕೆ ರೂ.10 ಲಕ್ಷಗಳ ಕಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರವ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ KSRTC ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ (ವಾಸು), ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷಾ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.


Share It

You cannot copy content of this page