ಶಿವಮೊಗ್ಗ: ರಸ್ತೆಯಲ್ಲಿ ಕೆಟ್ಟುನಿಂತಿದ್ದ ಲಾರಿಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಡ್ಯಾಂ ಬಳಿ ಬುಧವಾರ ಬೆಳಗ್ಗಿನ ಜಾವ ನಡೆದಿದೆ.
ಮುಂಜಾನೆ 3 ಗಂಟೆ ಸುಮಾರಿಗೆ ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಹೊರಟಿದ್ದ ದುರ್ಗಾಂಬ ಬಸ್ ಗಾಜನೂರು ಬಳಿ ಕೆಟ್ಟಡು ನಿಂತಿದ್ದ ಗೂಡ್ಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ 15 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಿಂದ ಶಿವಮೊಗ್ಗ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

