ಬೆಂಗಳೂರು: ಕುಡಿದ ಮತ್ತಿನಲ್ಲಿ ಜೊತೆಗಿದ್ದವನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ರಾಯಚೂರು ಮೂಲದ ಮಹದೇವ(65) ಕೊಲೆಯಾದಾತ, ಆರೋಪಿ ತಮಿಳುನಾಡಿನ ತಾಂಜಾವೂರು ಮೂಲದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ನಡೆದ ಜಗಳ ವಿಕೋಪಕ್ಕೆ ಹೋಗಿ ಕೊಲೆ ನಡೆದಿದೆ ಎನ್ನಲಾಗಿದೆ.
ಕುಡಿದ ಮತ್ತಿನಲ್ಲಿದ್ದ ಆರೋಪಿ ರಾಜು, ಜಗಳದ ವೇಳೆ ಮಹದೇವ ಹೊಟ್ಟೆಗೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಈ ವೇಳೆ ಗಂಭೀರ ಗಾಯಗೊಂಡ ಮಹದೇವ ಪ್ರಾಣ ಬಿಟ್ಟಿದ್ದು, ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಪರಶುರಾಮ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಘಟನೆ ಸಂಬಂಧ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಮತ್ತು ಕೊಲೆಯಾದ ವ್ಯಕ್ತಿ ಇಬ್ಬರೂ ಮಾರತಹಳ್ಳಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ.