ಬೆಂಗಳೂರು: ಕರ್ನೂಲ್ ಬಸ್ ದುರಂತದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಾರಿಗೆ ಬಸ್ ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುವ ಕುರಿತು ಎಲ್ಲ ನಿಗಮದ ಮುಖ್ಯಸ್ಥರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ಕೆಎಸ್ಆರ್ ಟಿಸಿ, ಬಿಎಂಟಿಸಿ, ವಾಯವ್ಯ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವ ಅವರು, ಇತ್ತೀಚೆಗೆ ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.
ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್ ನ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ನಾನು ಆ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸುಮಾರು 50,000 ವಾಹನಗಳಲ್ಲಿ ( ಸಾರಿಗೆ ಸಂಸ್ಥೆಗಳ ಬಸ್ಸುಗಳು, ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು, ಖಾಸಗಿ ಟೂರಿಸ್ಟ್ ಬಸ್‌ಗಳು, ಟೆಂಪೋ ಟ್ರಾವೆಲರ್ಸ್, ಶಾಲಾ ವಾಹನಗಳು ಸೇರಿ) ತುರ್ತು ನಿರ್ಗಮನ ದ್ವಾರಗಳನ್ನು ಕಡ್ಡಾಯ ಅಳವಡಿಸುವಂತೆ ಮತ್ತು ಸರ್ಮಪಕವಾಗಿ ದ್ವಾರ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಲು ಒಂದು ಅಭಿಯಾನವನ್ನೇ ಕೈಗೆತ್ತಿಕೊಂಡಿದ್ದರಿಂದ, ಹಲವು ಬಸ್ಸುಗಳಲ್ಲಿನ ಲೋಪದೋಷಗಳು ಗಮನಕ್ಕೆ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯವಾಯಿತು ಎಂದಿದ್ದಾರೆ.
ಬಸ್ಸುಗಳಲ್ಲಿ ಯಾವುದೇ ವಾಣಿಜ್ಯ ಸರಕು/ ಲಗೇಜ್ ಸಾಗಿಸುವ ಸಂದರ್ಭದಲ್ಲಿ ಬೆಂಕಿ ಸ್ಪರ್ಷಕ್ಕೆ ಸರಳವಾಗಿ ಉರಿಯುವ ಅಥವಾ ಇತರೆ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು. ಎಲ್ಲಾ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಈ ಮೇಲಿನ ಯಾವುದೇ ನೂನ್ಯತೆ ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ. ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಈ ಕೂಡಲೇ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
