ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ : ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸುವ ಸಂಬAಧ ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ.
ವಿಧಾನಸೌಧದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಸೀಮಂತ್ ಕುಮಾರ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿ, ಅನುಮತಿ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
ಸೀಮಂತ್ ಕುಮಾರ್ ನೇತೃತ್ವದ ಸಮಿತಿ ಮಧ್ಯಾಹ್ನ ಮೂರು ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಮಾಹಿತಿ ಕಲೆ ಹಾಕಿ ನಂತರ ಅನುಮತಿಯ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಜಿಬಿಎ ಆಯುಕ್ತರು ಜತೆಗೂಡಲಿದ್ದಾರೆ.
ಸಭೆಯಲ್ಲಿ ಅನುಮತಿ ನೀಡುವ ಕುರಿತಂತೆ ಅನೇಕ ಚರ್ಚೆಗಳು ನಡೆದಿದ್ದು, ಪ್ರೇಕ್ಷಕರಿಲ್ಲದೆ ಪಂದ್ಯ ನಡೆಸುವ ಕುರಿತು ಕೆಎಸ್‌ಸಿಎ ಮನವಿ ಮಾಡಿಕೊಂಡಿದೆ ಎನ್ನಲಾಗಿದೆ. ಈ ಕುರಿತು ಪರಿಶೀಲನೆ ನಡೆಸಲು ಸಮಿತಿ ರಚನೆ ಮಾಡಿದ್ದು, ಸಮಿತಿ ನೀಡುವ ವರದಿ ಆಧಾರದಲ್ಲಿ ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುತ್ತದೆ.


