ಬೆಂಗಳೂರು: ಶಿಡ್ಲಘಟ್ಟದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ರಾಜೀವ್ ಗೌಡ ತಮ್ಮ ವಿರುದ್ಧ ಸಲ್ಲಿಕೆಯಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಪೀಠ ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.
ಇಂದು ಅರ್ಜಿಯ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ರಾಜೀವ್‌ಗೌಡಗೆ ಬಂಧನದ ಭೀತಿ ಎದುರಾಗಿದೆ.
ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಅಮೃತಾಗೌಡ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

