ಕೊಪ್ಪಳ: ಸ್ಪಿರಿಟ್ ಕುಡಿದು ಇಬ್ಬರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿ ಆಯೋಜನೆ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮಾರುತಿ ಬಂಡಿ ಹಾಗೂ ಶರಣಪ್ಪ ಗುರಿಕಾರ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಇಬ್ಬರು ಆರೋಪಿಗಳು ಫೆ.4 ರಂದು ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಸ್ಪಿರಿಟ್ ಕುಡಿದು ನಾಲ್ವರು ಯುವಕರು ಅಸ್ವಸ್ಥಗೊಂಡಿದ್ದರು.
ಅಸ್ವಸ್ಥಗೊಂಡ ನಾಲ್ವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಭಾನುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಮತ್ತು ಅಮರಯ್ಯ ಎಂಬ ಯುವಕರು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮೃತ ರಮೇಶ್ ತಂದೆ ಯಮನೂರಪ್ಪ ಮುನಿರಾಬಾದ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅಂದು ಪಾರ್ಟಿ ಆಯೋಜನೆ ಮಾಡಿದ್ದ ಇಬ್ಬರನ್ನು ಬಂಧಿಸಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದು, ಪ್ರಕರಣದಲ್ಲಿ ಇನ್ಯಾರಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

