ಧಾರವಾಡ: ಜಿಲ್ಲಾಧಿಕಾರಿಗಳ ಮನವಿಯ ಮೇರೆಗೆ ಜುಬಿಲಿ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟಿವೆ.
ಧಾರವಾಡದ ಜುಬಿಲಿ ವೃತ್ತದಲ್ಲಿ ಕಳೆದ ಮೂರುವರೆ ಗಂಟೆಯಿAದ ನಡೆಯುತ್ತಿದ್ದ ಪ್ರತಿಭಟನೆಗೆ ಜಿಲ್ಲಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಜಿಲ್ಲಾಧಿಕಾರಿ ಸ್ನೇಹಲ್ ಅವರು, ವಿದ್ಯಾರ್ಥಿ ಸಂಘಟನೆಗಳ ಜತೆಗೆ ಮಾತುಕತೆ ನಡೆಸಿ, ನಿಮ್ಮ ಹೋರಾಟದ ಕುರಿತು ಸರಕಾರಕ್ಕೆ ವರದಿ ನೀಡಲಾಗಿದ್ದು, ಸರಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರಕ್ಕೆ ತೊಂದರೆಯಾಗಲಿದ್ದು, ಪ್ರತಿಭಟನೆ ಕೈಬಿಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಹೋರಾಟಗಾರರು ಪ್ರತಿಭಟನೆ ಕೈಬಿಟ್ಟರು. ಡಿಸಿ ಸ್ಥಳದಿಂದ ಹೋಗುತ್ತಿದ್ದಂತೆ ಪೊಲೀಸರು, ಪ್ರತಿಭಟನೆ ನಡೆಸುತ್ತಿದ್ದವರನ್ನು ಸ್ಥಳದಿಂದ ತೆರಳುವಂತೆ ಸೂಚಿಸಿದರು.

