ಸುದ್ದಿ

ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ತ್ವರಿತಗೊಳಿಸಿ: ರಾಜೇಂದ್ರ ಚೋಳನ್

Share It

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯವನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಕುರಿತು ಮಾನ್ಯ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ರವರ ನೇತೃತ್ವದಲ್ಲಿ ನಡೆದ ವೀಡಿಯೊ ಸಂವಾದದಲ್ಲಿ ನೀಡಿದ ಆದೇಶದಂತೆ, ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವುದು ಅತ್ಯಂತ ಮಹತ್ವದ್ದಾಗಿದ್ದು, ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಆರೋಗ್ಯ ವೈದ್ಯಾಧಿಕಾರಿಗಳು ತಮ್ಮ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಪ್ರತಿದಿನ ಮಧ್ಯಾಹ್ನದಿಂದ ಸಂಬಂಧಿತ ವಲಯದ ಕಂದಾಯ ಅಧಿಕಾರಿಗಳ ಕಛೇರಿಗೆ ಹಾಜರಾಗುವಂತೆ ಸೂಚಿಸಿ ಆದೇಶಿಸಿದ್ದಾರೆ.

ಯಾವುದೇ ವಿಳಂಬ ಅಥವಾ ಗೈರುಹಾಜರಿ ಇಲ್ಲದೆ ದಿನಾಂಕ 20-03-2026ರವರೆಗೆ ಈ ಕಾರ್ಯವನ್ನು ನಿರಂತರವಾಗಿ ನಿರ್ವಹಿಸಲು ನಿರ್ದೇಶನ ನೀಡಿದರು. ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹಾಗೂ ಖಾಯಂ ಕಿರಿಯ ಆರೋಗ್ಯ ಪರಿವೀಕ್ಷಕರು ಪೂರ್ವಾಹ್ನದಲ್ಲಿ ತಮ್ಮ ಕಚೇರಿಯ ನಿಯಮಿತ ಕಾರ್ಯಗಳನ್ನು ಪೂರ್ಣಗೊಳಿಸಿದ ನಂತರ ಮಧ್ಯಾಹ್ನದಿಂದ ಸಂಬಂಧಿತ ವಲಯದ ಕಂದಾಯ ಅಧಿಕಾರಿಗಳ ಕಛೇರಿಯಲ್ಲಿ ಹಾಜರಾಗಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


Share It

You cannot copy content of this page